ರಾಯಚೂರು: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳನ್ನೊಳಗೊಂಡ ಆರ್‌ಡಿಸಿಸಿ ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಶ್ವನಾಥ ತಂದೆ ಅಮರಪ್ಪ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಶಿವಶಂಕರಗೌಡ ತಂದೆ ನಿಂಗನಗೌಡ ಅವರು ಅವಿರೋಧವಾಗಿ ಆಯ್ಕೆಗೊಂಡರು.
೧೩ ಜನ ಚುನಾಯಿತ, ಮೂವರು ನಾಮ ನಿರ್ದೇಶಿತ ಒಟ್ಟು ೧೬ ನಿರ್ದೇಶಕರನ್ನು ಒಳಗೊಂಡ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇಂದು ನಡೆಸಲಾಯಿತು. ಮುಂಜಾನೆ ೯ ಗಂಟೆಯಿಂದ ೧೦ ಗಂಟೆವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ, ಉಪಾಧ್ಯಕ್ಷ ಸ್ಥಾನಕ್ಕೆ ಶಿವಶಂಕರಗೌಡ ಇವರು ನಾಮಪತ್ರ ಸಲ್ಲಿಸಿದ್ದರು.
ನಿಗದಿತ ಕಾಲಾವಧಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇತರರು ನಾಮಪತ್ರ ಸಲ್ಲಿಸದಿರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶಿವಶಂಕರಗೌಡ ಅವರನ್ನು ಅವಿರೋಧ ಆಯ್ಕೆಯ ಘೋಷಣೆ ಮಾಡಲಾಯಿತು. ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಭಾರೀ ಕುತೂಹಲ ಮೂಡಿಸಿತ್ತು. ನಿರ್ದೇಶಕರ ಚುನಾವಣೆ ಸಂದರ್ಭದಲ್ಲಿ ನಡೆದ ಜಿದ್ದಾಜಿದ್ದಿ ಪೈಪೋಟಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೂ ನಡೆಯಬಹುದೆಂಬ ನಿರೀಕ್ಷೆ ಮಾಡಲಾಗಿತ್ತು. ಆದರೆ, ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆಗೆ ಸಂಬಂಧಿಸಿ ಎಲ್ಲಾ ಪಕ್ಷದ ಮುಖಂಡರು ಮತ್ತು ನಿರ್ದೇಶಕರು ಸರ್ವಾನುಮತದಿಂದ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿಯಾದ ಸಹಾಯಕ ಆಯುಕ್ತ ರಜನಿಕಾಂತ ಅವರು ಮಧ್ಯಾಹ್ನ ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದರು.



















