ICC T20 WORLD CUP 2024 : ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದಿದೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 169 ರನ್ ಗಳಿಸಲಷ್ಟೇ ಶಕ್ತವಾಯಿತು.
ಶನಿವಾರ, ಜೂನ್ 29ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 7 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಿತು.
ಇದೇ ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವು ಬಲಿಷ್ಠ ಭಾರತದೆದುರು ಕೊನೆಯ ಎಸೆತದವರೆಗೂ ಹೋರಾಡಿ ಸೋಲೊಪ್ಪಿಕೊಂಡಿತು.
ಇನ್ನು ಈ ಮೂಲಕ ಭಾರತ ತಂಡ 13 ವರ್ಷಗಳ ಐಸಿಸಿ ವಿಶ್ವಕಪ್ ಟ್ರೋಫಿ ಬರವನ್ನು ನೀಗಿಸಿಕೊಂಡಿತು ಮತ್ತು 2007ರ ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಬಳಿಕ 2024ರಲ್ಲಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಿತು.
ಭಾರತ ತಂಡದ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕೊನೆಗೂ ಟಿ20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರು. ಇದೇ ವೇಳೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭಾರತ ತಂಡ ಗುರು ಕಾಣಿಕೆ ನೀಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ ಅವರ ನಿರ್ಣಾಯಕ ಅರ್ಧಶತಕ ಮತ್ತು ಅಕ್ಷರ್ ಪಟೇಲ್ ಅವರ ಅಮೋಘ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು.
177 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸುವ ಮೂಲಕ ವಿರೋಚಿತ ಸೋಲು ಕಂಡಿತು.


















