ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ
ಸೆ.15 ರಂದು ಹಮ್ಮಿಕೊಳ್ಳುವ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚನೆ”
ವಿಜಯಪುರ, ಸೆ.11: ಇದೇ ಸೆಪ್ಟಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಶಾಲಾ-ಕಾಲೇಜ್ ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರು, ಸರ್ಕಾರೇತರ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.
ಸೆ.15ರಂದು ಬೆಳಿಗ್ಗೆ 8-30ಕ್ಕೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಆಲಮಟ್ಟಿಯವರೆಗೆ ಏಕಕಾಲಕ್ಕೆ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಈಗಾಗಲೇ ಮಾನವ ಸರಪಳಿ ನಿರ್ವಹಣೆಗೆ 9 ಜನ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, 14 ಜನ ಸೆಕ್ಟರ್ ಅಧಿಕಾರಿಗಳು ಹಾಗೂ ಪ್ರತಿ ಕಿಲೋ ಮೀಟರ್‍ಗೆ ಓರ್ವರಂತೆ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ. ನೋಡಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಒಳಗೊಂಡಂತೆ ಸಂಪೂರ್ಣ ಯೋಜನೆ ಸಿದ್ಧಪಡಿಸಿಕೊಂಡು ಮಾನವ ಸರಪಳಿ ನಡೆಯುವ ಗ್ರಾಮಗಳಲ್ಲಿ ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂದಾಜು 60 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಮಾನವ ಸರಪಳಿ ಹಾದು ಹೋಗುವ ಮಾರ್ಗಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗದಂತೆ ಗಮನ ಹರಿಸಬೇಕು. ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆಗೆ ಕ್ರಮ ವಹಿಸಬೇಕು. ಪ್ರತಿ ಕಿಮೀಗೆ ಬಣ್ಣ ಹಚ್ಚಿ ಗುರುತು ಮಾಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಸಾರ್ವಜನಿಕರ ಸುರಕ್ಷತೆಗೆ ಗಮನ ಹರಿಸಬೇಕು. ನಿಯೋಜಿತ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪ-ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲು ಆದ್ಯತೆ ಮೇಲೆ ಕ್ರಮ ಕೈಗೊಂಡು ಅನುಪಾಲನಾ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಮಾರ್ಗಾಧಿಕಾರಿಗಳ ಕಾರ್ಯ ಅತ್ಯಂತ ಮಹತ್ವದ್ದಾಗಿರುವುದರಿಂದ ತಮಗೆ ವಹಿಸಿದ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲ ಅಗತ್ಯ ಮಾಹಿತಿ ಪಡೆದುಕೊಂಡು ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆಯಾದಲ್ಲಿ ಮಾರ್ಗಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಪ್ರತಿ ಅರ್ಧ ಕಿಲೋಮೀಟರ್‍ಗೆ ಕುಡಿಯುವ ನೀರಿನ ವ್ಯವಸ್ಥೆ, ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಕರೆದುಕೊಂಡು ಬಂದು ಹೋಗಲು ಸೂಕ್ತ ಬಸ್ ವ್ಯವಸ್ಥೆ ಸೇರಿದಂತೆ ಈ ಕಾರ್ಯಕ್ಕೆ ಸಂಬಂಧಿಸಿದ ಶಾಲಾ ಶಿಕ್ಷಕರನೋರ್ವರನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆ ಕ್ರಮ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ತಂಡ, ಅಂಬ್ಯೂಲೆನ್ಸ್, ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅಲ್ಪೋಪಹಾರ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಗೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮ ನಡೆಯುವ ತಾಲೂಕಿನ ಸಂಬಂಧಿಸಿದ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು, ಸಭೆ ನಡೆಸಿ ಸೂಕ್ತ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಕ್ರಮ ವಹಿಸಬೇಕು. ಜಿಲ್ಲೆಯ ವಿವಿಧ ವಸತಿ ಶಾಲೆ, ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಕ್ರೀಡಾ-ಸಾಂಸ್ಕøತಿಕ ಸಂಘಗಳ ಸದಸ್ಯರು, ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಕಾರ್ಯಕ್ರಮ ನಡೆಯುವ ಸ್ಥಳದ ಸಮೀಪದಲ್ಲಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಸಂಬಂಧಿಸಿದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಅತ್ಯಂತ ಸಕ್ರೀಯವಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.