ಅಭಿವೃದ್ಧಿ ಶೂನ್ಯ: ಬಿಜೆಪಿ ನೇತೃತ್ವದಲ್ಲಿ ಹೋರಾಟ ಎಚ್ಚರಿಕೆ: ದೇವೇಂದ್ರ ದೇಸಾಯಿ
ಕಲ್ಬುರ್ಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಗರಣಗಳಿಂದ ಕೂಡಿದ್ದು, ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದು ಬಿಜೆಪಿ ಒಬಿಸಿ ನಗರ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಆರೋಪಿಸಿದ್ದಾರೆ.
ಜೂನ್ 10 ರಂದು ಬೆಳಗ್ಗೆ 11 ಗಂಟೆಗೆ ಕಲ್ಬುರ್ಗಿಯ ತಿಮ್ಮಾಪುರಿ ಸರ್ಕಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ “ಕುಂಭಕರ್ಣ ನಿದ್ದೆ” ವೇಷಧಾರಿಯ ಮೂಲಕ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ದಲಿತ, ಹಿಂದೂ ಹಾಗೂ ವಿಶ್ವಕರ್ಮ ಸಮುದಾಯಗಳ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ವಿವಿಧ ಇಲಾಖೆಗಳಲ್ಲಿನ ಹಗರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ ಎಂದು ಆರೋಪಿಸಿದರು. ಜನರಿಗೆ ಸುಳ್ಳು ಭರವಸೆ ನೀಡಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ, ಅಬಕಾರಿ ಹಾಗೂ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಅನಿಯಮಿತತೆಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ವಿರೋಧ ಪಕ್ಷಗಳ ಧ್ವನಿಯನ್ನು ಕುಂಠಿತಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
ಗುಲ್ಬರ್ಗ ಜಿಲ್ಲೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ, ಬಿಜೆಪಿ ನೇತೃತ್ವದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ದೇವೇಂದ್ರ ದೇಸಾಯಿ ಕಲ್ಲೂರ ಎಚ್ಚರಿಕೆ ನೀಡಿದ್ದಾರೆ.
.