ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ
ವಿಜಯಪುರ, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಇಂದು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ ತಿಡಗುಂದಿ ವಿಸ್ತರಣಾ ಕಾಲುವೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ ಪ್ರಗತಿ, ಕಾಮಗಾರಿಗಳ ಗುಣಮಟ್ಟ, ಕಾರ್ಯಗತಗೊಳಿಸುವ ವೇಗ ಹಾಗೂ ರೈತರಿಗೆ ದೊರೆಯಲಿರುವ ಪ್ರಯೋಜನಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ್ ಮಾತನಾಡಿ, ನೀರಾವರಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ರೈತರ ಹೊಲಗಳಿಗೆ ತಲುಪಿಸುವ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ ತಿಡಗುಂದಿ ವಿಸ್ತರಣಾ ಕಾಲುವೆ ಕಾಮಗಾರಿಗಳು ಪೂರ್ಣಗೊಂಡರೆ ಇಂಡಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ರೈತರಿಗೆ ಮಹತ್ತರ ಅನುಕೂಲವಾಗಲಿದೆ. ಕೃಷಿ ಉತ್ಪಾದನೆ ಹೆಚ್ಚಳವಾಗುವುದರ ಜೊತೆಗೆ ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು. ಈ ಯೋಜನೆಗಳು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೃಷ್ಣಮೂರ್ತಿ ಕುಲಕರ್ಣಿ, ಬಸವರಾಜು, ಗೋವಿಂದ ರಾಠೋಡ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
















