ಇಂಡಿ: ಜಿಲ್ಲೆಯಲ್ಲಿ ಮಳೆಯ ಅಭಾವದಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣವೇ ಅಖಂಡ ವಿಜಯಪುರ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಇಂಡಿ ಕ್ಷೇತ್ರದ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಹಾಲಿ ಶಾಸಕರು ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನದ ವಿರುದ್ಧ ತೀವ್ರವಾಗಿ ಹರಿಹಾಯ್ದರು.
ಜನಪ್ರತಿನಿಧಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರವಿಕಾಂತ್ ಪಾಟೀಲ್, “ಜಿಲ್ಲೆಯ ನಾಯಕರು ತಮಗೆ ಮಂತ್ರಿ ಸ್ಥಾನ ಸಿಗಬೇಕೆಂದು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ, ಕಸರತ್ತುಗಳನ್ನು ನಡೆಸುತ್ತಾರೆ. ಆದರೆ, ಜಿಲ್ಲೆಯ ರೈತರು ಮಳೆ ಇಲ್ಲದೆ, ಬೆಳೆ ಒಣಗಿ ಕಣ್ಣೀರು ಹಾಕುತ್ತಿರುವಾಗ ಇವರ ಹೋರಾಟ ಎಲ್ಲಿ ಹೋಯಿತು?” ಎಂದು ಖಾರವಾಗಿ ಪ್ರಶ್ನಿಸಿದರು. ಅಧಿಕಾರದ ಆಸೆಗಾಗಿ ಬೀದಿಗಿಳಿಯುವ ಶಾಸಕರು, ರೈತರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಜಿಲ್ಲೆಯ ಹಾಲಿ ಶಾಸಕರಿಗೆ ನೇರ ಎಚ್ಚರಿಕೆ ನೀಡಿದ ಮಾಜಿ ಶಾಸಕರು, “ನಿಮಗೆ ರೈತರ ಬದುಕಿನ ಬಗ್ಗೆ ನಿಜವಾದ ಕಾಳಜಿ ಇದ್ದರೆ, ತಕ್ಷಣವೇ ಸರ್ಕಾರದ ಮೇಲೆ ಒತ್ತಡ ತಂದು ವಿಜಯಪುರವನ್ನು ಬರಗಾಲ ಜಿಲ್ಲೆ ಎಂದು ಘೋಷಣೆ ಮಾಡಿಸಿ. ಒಂದು ವೇಳೆ ಈ ಪರಿಸ್ಥಿತಿಯಲ್ಲಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಲು ನಿಮ್ಮಿಂದ ಸಾಧ್ಯವಾಗದಿದ್ದರೆ, ನಿಮ್ಮ ಶಾಸಕ ಸ್ಥಾನಗಳಿಗೆ ತಕ್ಷಣವೇ ರಾಜೀನಾಮೆ ನೀಡಿ ಹೊರಬನ್ನಿ” ಎಂದು ಸವಾಲು ಹಾಕಿದರು.
ಮಳೆ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ.
ಸರ್ಕಾರದ ತಾರತಮ್ಯದ ನೀತಿಯನ್ನು ಖಂಡಿಸಿದ ಪಾಟೀಲ್, ರೈತರ ಪರವಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಘೋಷಿಸಿದರು.
ತುರ್ತು ಪರಿಹಾರಕ್ಕೆ ಒತ್ತಾಯ: ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ತಕ್ಷಣವೇ ಸೂಕ್ತ ಪರಿಹಾರ ಧನ ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇಂಡಿ: ಮಾಜಿ ಶಾಸಕ ರವಿಕಾಂತ್ ಪಾಟೀಲ್ ಭಾವಚಿತ್ರ.