VOJ News Desk: ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10 ನೇ ತಾರೀಖಿನಂದು ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 24 ರಂದು ನಾಮಪತ್ರ ವಾಪಸ್ ಪಡೆಯಲು ದಿನಾಂಕವನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಹೇಳಿದರು.
ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ.
ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಿದ್ದವಿದೆ. ವಿದ್ಯುನ್ಮಾನ ಮತ ಯಂತ್ರಗಳ ಸಿದ್ದತೆ ನಡೆದಿದೆ. 2018 ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿತ್ತು. ಈ ಬಾರಿ ಮತದಾನ ಹೆಚ್ಚಿಸಲು ಆಯೋಗ ಪ್ರಯತ್ನ ಮಾಡುತ್ತಿದೆ. ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇನ್ನು ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದು, ಅದರಲ್ಲಿ 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು, 4699 ತೃತೀಯ ಲಿಂಗಿಗಳ ಮತದಾರರಿದ್ದಾರೆ. ಜೇನು ಕುರುಬ, ಕಾಡು ಕುರುಬ ಮತದಾರರಿಗೆ ಪ್ರತ್ಯೇಕ ಬೂತ್ಗಳನ್ನು ತೆರೆಯಲಾಗುತ್ತದೆ.
ವಿಕಲಚೇತನರಿಗೆ ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುವುದು.
ರಾಜ್ಯದ 224 ಮತ ಕ್ಷೇತ್ರಗಳಿಗೆ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ 34,219. ನಗರ ಪ್ರದೇಶಗಳಲ್ಲಿ 24063 ಮತಗಟ್ಟಿಗಳನ್ನು ಸ್ಥಾಪಿಸಲಾಗುತ್ತದೆ. ಒಂದೊಂದು ಮತಗಟ್ಟಿಗೆ 883 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.