ಕಲಬುರಗಿ : ಕೋವಿಡ್ ಲಸಿಕೆಯನ್ನು ಎಲ್ಲರೂ ಹಾಕಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಶೇಕಡ 100 ರಷ್ಟು ಸಾಧಿಸಬೇಕು ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಹಾಗೂ ಕಲಬುರಗಿ ಜಿಲ್ಲಾ ಕೋವಿಡ್-19 ಮತ್ತು ನೆರೆ ಮೇಲುಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ ಅವರು ತಿಳಿಸಿದರು. ಆದರ್ಶ ನಗರದ ಕರ್ನಾಟಕ ಪಬ್ಲಿಕ್ ಶಾಲೆ ( ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ)ಯಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲೆಯ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ -19 ಲಸಿಕೆ ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ನಾನು ಸಹ 2 ಡೋಸ್ ಲಸಿಕೆ ಹಾಕಿಸಿಕೊಂಡಿದ್ದೇನೆ. ಪ್ರಧಾನ ಮಂತ್ರಿಗಳು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಮುಂತಾದ ಎಲ್ಲಾ ವರ್ಗದವರು ಕೂಡ ಲಸಿಕೆ ಹಾಕಿಸಿಕೊಂಡಿದ್ದಾರೆ. ಅದ್ದರಿಂದ ಎಲ್ಲರೂ ತಪ್ಪದೇ ಪಡೆಯಬೇಕು ಎಂದು ಅವರು ಕರೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ, ದೇಶದ 100 ಕೋಟಿಗೂ ಅಧಿಕ ಜನರಿಗೆ ಜನತೆಗೆ ಉಚಿತ ಲಸಿಕೆ ಹಾಕುವ ಮೂಲಕ ಇಡೀ ಜಗತ್ತಿನಲ್ಲಿ ಸಾಧನೆ ಮಾಡಿದೆ ಎಂದು ಅವರು ಹಾಡಿಹೊಗಳಿದರು.
ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಒಟ್ಟು 1,59,770 ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಮಾತನಾಡಿ, 140 ಕೋಟಿ ಜನರಿಗೆ ಒಂದು ವರ್ಷದಲ್ಲಿ ಕೋವಿಡ್ ಲಸಿಕೆ ಹಾಕುವ ಮೂಲಕ ನರೇಂದ್ರ ಮೋದಿ ಸರ್ಕಾರ ದಾಖಲೆ ಮಾಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಕೋವಿಡ್ ನಿರ್ಮೂಲನೆ ನಿಟ್ಟಿನಲ್ಲಿ ಸಚಿವ ಮುರುಗೇಶ್ ನಿರಾಣಿ ತುಂಬಾ ಸಹಕಾರ ನೀಡಿದ್ದಾರೆ ಎಂದು ಗುಣಗಾನ ಮಾಡಿದರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ. ಅನಿಲ್ ತಾಳಿಕೋಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.



















