ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಕರಿಗೆ ಕರೆ
ಅಫಜಲಪುರ: ನಾಗರಿಕ ಸಮಾಜದಲ್ಲಿ ಶಾಂತಿ ನೆಲೆಸಲು ಯುವಕರು ಹೆಚ್ಚಿನ ರೀತಿಯಲ್ಲಿ ಜಾಗೃತರಾಗಿ ಕಾರ್ಯ ಪ್ರವೃತ್ತರಾಗಬೇಕು ಎಂದು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಆಯೋಜಿಸಿದ್ದ ಯುವ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಇತ್ತೀಚೆಗೆ ಕೊಲೆ ಪ್ರಕರಣಗಳು ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇಂತಹ ಕೃತ್ಯಗಳನ್ನು ತಡೆಯಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹೆಚ್ಚಿನ ಶ್ರಮ ವಹಿಸಬೇಕು.
ಹೀಗಾಗಿ ಕೂಡಲೇ ಬೀಟ್ ಪೊಲೀಸರ ಸಮಿತಿ ರಚಿಸಿ ಕೊಲೆ, ಕಳ್ಳತನ, ಅಕ್ರಮ ಸಾರಾಯಿ ಮಾರಾಟ, ಅಕ್ರಮ ಮರಳು ಸಾಗಾಟ ಸೇರಿದಂತೆ ಮುಂತಾದ ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು.
ಅಕ್ರಮ ಶಸ್ತ್ರಾಸ್ತ್ರಗಳು ಕಂಡು ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಹಾಗೂ ರೌಡಿ ಶೀಟರ್ ಗಳು ತಮ್ಮ ದೈನಂದಿನ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು. ಒಂದು ವೇಳೆ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗುವುದು ಕಂಡು ಬಂದರೆ ಅವರನ್ನು ಗಡಿಪಾರು ಮಾಡುವುದಾಗಿ ಎಚ್ಚರಿಕೆ ನೀಡಿದರು.
ರಾಷ್ಟ್ರದ ಉತ್ತಮ ಪ್ರಜೆಯಾದ ಯುವಕರು ಕಾನೂನು ಪರಿಪಾಲನೆ ಮಾಡಿ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲು ಕಂಕಣ ಬದ್ಧರಾಗಬೇಕು ಎಂದು ಕರೆ ನೀಡಿದರು.
ಅದರಂತೆ ಕರಜಗಿ ವಲಯದಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕರಜಗಿ ಗ್ರಾಮದಲ್ಲಿ ಹೊಸದಾಗಿ ಪೊಲೀಸ್ ಠಾಣೆ ನಿರ್ಮಿಸಬೇಕು ಹಾಗೂ ಅಫಜಲಪುರ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಓಡಾಟ ಮತ್ತು ಜನದಟ್ಟಣೆ ಹೆಚ್ಚಾಗುತ್ತಿದ್ದು ಸಂಚಾರಿ ಪೊಲೀಸ್ ಠಾಣೆ ನಿರ್ಮಿಸುವಂತೆ ಸಾರ್ವಜನಿಕರು ಎಡಿಜಿಪಿ ಅವರಿಗೆ ಮನವಿ ಮಾಡಿದರು.
ನಂತರ ಕಾನೂನು ಸುವ್ಯವಸ್ಥೆ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಉತ್ಸಾಹಿ ಯುವಕರಿಗೆ ಯುವ ಸಮಿತಿ ಸದಸ್ಯ ಎಂಬ ಪೊಲೀಸ್ ಲಾಂಛನ(ಬ್ಯಾಡ್ಜ್) ನೀಡಲಾಯಿತು.
ಈ ಸಂದರ್ಭದಲ್ಲಿ ಈಶಾನ್ಯ ವಲಯ ಐಜಿಪಿ ಮನೀಶ್ ಖರ್ಬಿಕರ್, ಎಸ್.ಪಿ ಇಶಾ ಪಂತ್, ಹೆಚ್ಚುವರಿ ಎಸ್.ಪಿ ಪ್ರಸನ್ನಕುಮಾರ ದೇಸಾಯಿ, ಡಿವೈಎಸ್ಪಿ ರವೀಂದ್ರ ಶಿರೂರ, ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐಗಳಾದ ಸುರೇಶ ಕುಮಾರ ಚವ್ಹಾಣ, ರಾಜಶೇಖರ್ ರಾಠೋಡ, ಗಂಗಮ್ಮ ಜಿನ್ನಿಕೇರಿ, ದೇವಿಂದ್ರ ರೆಡ್ಡಿ ಸೇರಿದಂತೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ