ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
ಜಾಗೃತಿ ಮೂಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ವಿಜಯಪುರ ಜೂನ್,05 :ಜೂನ್ 12ರಂದು ನಡೆಯುವ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರ ಸಭೆ ಹಾಗೂ ಪಟ್ಟಣ ಪಂಚಾಯತಿ ಮೂಲಕ ಕಸ ವಿಲೇವಾರಿಯ ಸ್ವಚ್ಛವಾಹಿನಿಯ ವಾಹನಗಳಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಕುರಿತು ಸಂದೇಶಗಳನ್ನು ಹಾಗೂ ಜಿಂಗಲ್ಸ್‍ಗಳ ಮೂಲಕ ಉಚಿತವಾಗಿ ಪ್ರಚುರಪಡಿಸಲು ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಂಗೂರ ಸಾರುವ ಮೂಲಕ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಬಾಲ ಕಾರ್ಮಿಕ ಪದ್ಧತಿ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ಜನ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜನರಲ್ಲಿ ಜಾಗೃತಿ ಮೂಡಿಸುವ ಭಾಗವಾಗಿ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬಾಲಕಾರ್ಮಿಕ ಪದ್ಧತಿ ನಿವಾರಣೆ ಕುರಿತ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿ ಎಲ್ಲಾ ಮಕ್ಕಳು ಈ ಕಾರ್ಯ ಚಟುವಟಿಕೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆಯೂ ಶಿಕ್ಷಣ ಇಲಾಖೆಗೆ ಸೂಚಿಸಿದ ಅವರು, ಬಾಲಕಾರ್ಮಿಕ ಮುಕ್ತ ಗ್ರಾಮಕ್ಕೆ ಬಹುಮಾನ ನೀಡಬೇಕು ಎಂದು ತಿಳಿಸಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅಚ್ಚುಕಟ್ಟಾಗಿ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಮಾಣ ವಚನ ಸ್ವೀಕರಿಸುವಂತೆ ಸೂಚಿಸಿದರು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶ್ರೀಮತಿ ಉಮಾಶ್ರೀ ಕೋಳಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ ಗುಣಾರಿ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ದೀಪಾಕ್ಷಿ ಜಾನಕಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾರ್ಮಿಕ ನಿರೀಕ್ಷಕರುಗಳು ಉಪಸ್ಥಿತರಿದ್ದರು.