ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ…
ವಿಜಯಪುರ
ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ನಗರದ ಅಫಲ್ಪುರ ಟಕ್ಕೆ ನಿವಾಸಿ ಯಾಸೀನ್ ಎಂಬುವವರು ತಮ್ಮ ಪತ್ನಿಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪತ್ನಿಯ ಮುಂದೆಯೇ ಫೈರಿಂಗ್ ನಡೆಸಿದ ದುಷ್ಕರ್ಮಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಳಿಕ ಮೃತದೇಹವನ್ನು ವಿಜಯಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಮತ್ತು ಆರೋಪಿಗಳು ಯಾರು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
















