ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಇಂಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಎಸ್. ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ಆಯೋಜಿಸಿದ್ದ ದೇಶಭಕ್ತಿ ಗೀತೆ ಗಾಯನೋತ್ಸವ ಸ್ಪರ್ಧೆ ನಡೆಯಿತು. ವಿವಿಧ ಕಾಲೇಜುಗಳು ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ ಆರತಿ ಗಾಯಕ್ವಾಡ್ ಪ್ರಥಮ, ಜ್ಯೋತಿ ಹಂಡಗೆ ದ್ವಿತೀಯ ಹಾಗೂ ಶಿವಕ್ಕ ಬಿರಾದಾರ್ ತೃತೀಯ ಸ್ಥಾನ ಪಡೆದರು. ವಿಜೇತ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಎಸ್. ಪಾಟೀಲ್, ಗೌರವ ಕಾರ್ಯದರ್ಶಿ ಬಸವರಾಜ ತಾಂಬೆ, ನಿರ್ದೇಶಕ ಶಾಂತುಗೌಡ ಬಿರಾದಾರ್ ಹಾಗೂ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಸದಾನಂದ ಎಸ್. ಈರನಕೇರಿ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ನೀಲಕಂಠಗೌಡ ಎಸ್. ಪಾಟೀಲ್, ಯುವಜನರಲ್ಲಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು, ದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕು ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ಅವರ ತ್ಯಾಗ ಮತ್ತು ಆದರ್ಶಗಳನ್ನು ಯುವಪೀಳಿಗೆ ಮುಂದುವರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯ ಆರ್.ಎಸ್. ಕುಲಕರ್ಣಿ, ಪ್ರಾಚಾರ್ಯ ವಿಜಯ ರಾಥೋಡ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿವಿಧ ಕಾಲೇಜುಗಳು, ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಶಾಲೆಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

















