ಆಡಳಿತ ಕಚೇರಿಯಲ್ಲಿ “ಭಾರತದ ಸಂವಿಧಾನ ದಿನ” ಆಚರಣೆ
ಇಂಡಿ : ನ.26 ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನ.26ರಂದು ಸಂವಿಧಾನವನ್ನು ಅಳವಡಿಸಿಕೊಂಡ ಹಿನ್ನಲೆಯಲ್ಲಿ ಇಂದು ನ.26ರ ಮಂಗಳವಾರದಂದು ನಗರದ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ನೇತೃತ್ವದಲ್ಲಿ ಭಾರತದ ಸಂವಿಧಾನ ಪಿಠೀಕೆ ಓದುವ ಮೂಲಕ ಭಾರತದ ಸಂವಿಧಾನ ದಿನ ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು.
ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಬಿ.ಎ ರಾವೂರ, ಎಸ್ ಆರ್ ಮುಜಗೊಂಡ, ಆರ್ ಬಿ ಮೂಗಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕಚೇರಿಯ ಸಿಬ್ಬಂದಿಗಳು, ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯದ ನಿಲಯಪಾಲಕರು, ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಇದ್ದರು.