ಡಿ.ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ..!
ವಿಜಯಪುರ: ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ದಿವಂಗತ ಡಿ.ದೇವರಾಜ ಅರಸು ಅವರ ಚಿಂತನೆಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದುಳಿದ ವರ್ಗಗಳ ಕೋಶವು ಮಂಗಳವಾರ ಆಯೋಜಿಸಿದ್ದ ದಿವಂಗತ ಡಿ.ದೇವರಾಜ ಅರಸು ಅವರ ೧೦೯ನೇ ಜನ್ಮದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳು, ದಲಿತರು ಮತ್ತು ಶೋಷಿತ ವರ್ಗಗಳನ್ನು ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ದೇವರಾಜ ಅರಸು ಅವರು ಮಾಡಿದರು ಎಂದು ಅವರ ಸಾಧನೆಗಳನ್ನು ವಿದ್ಯಾರ್ಥಿನಿಯರಿಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಈ ಶಿಕ್ಷಣ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಎಂ.ಬಿ.ಕೋರಿ ಮಾತನಾಡಿ, ದಿ.ದೇವರಾಜ ಅರಸು ಜೀವನ ಮತ್ತು ಸಾಧನೆಗಳು ಇಂದಿಗೂ ಪ್ರೇರಣೆಯಾಗಿದ್ದು, ಅರಸು ಅವರ ಕಾಲದಲ್ಲಿ ಕರ್ನಾಟಕ ರಾಜ್ಯವು ಪ್ರಗತಿಯ ಉತ್ತುಂಗ ಸ್ಥಿತಿಯನ್ನು ಮುಟ್ಟಿತ್ತು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಮಾತನಾಡಿ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ರಾಜಕೀಯ ಇಚ್ಛಾಶಕ್ತಿ ಅತ್ಯಂತ ಅಗತ್ಯವಾಗಿದ್ದು, ಕೆಟ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡುವ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದವರು ದೇಔರಾಜ ಅರಸು ಅವರು ಎಂದು ವಿಶ್ಲೇಷಿಸಿದರು. ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಜೀವನ ಮತ್ತು ಸಾಧನೆ ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು.
ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಪ್ರೊ.ವಿಷ್ಣು ಶಿಂದೆ ಸ್ವಾಗತಿಸಿದರು. ಬಿ.ಎಡ್ ಪ್ರಶಿಕ್ಷಣಾರ್ಥಿ ಯಾಸ್ಮಿನ್ ಅತ್ತಾರ್ ನಿರೂಪಿಸಿದರು. ವಿದ್ಯಾಶ್ರೀ ವಂದಿಸಿದರು.