ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..!
ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.
ಮುದ್ದೇಬಿಹಾಳ: ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಹಿರಿಯ ರಾಜಕಾರಣಿ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ ಘಟಕದ ತಾಲ್ಲೂಕು ಉಪಾಧ್ಯಕ್ಷ ಸಂಗಮೇಶ ವಿಜಯಕರ ಆಗ್ರಹಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಗೌಡ ಅವರು ಜಾತಿ-ಧರ್ಮಗಳ ಭೇದವಿಲ್ಲದೆ ಸಮಾಜದ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿ ಕೆಲಸ ಮಾಡುತ್ತಿರುವ ಮಹಾನ್ ನಾಯಕರು. ಈ ಹಿಂದೆ ಅವರು ಮೈಸೂರು ಸ್ಯಾಂಡಲ್ ಸೋಪ್ ನಿಗಮದ ಅಧ್ಯಕ್ಷರಾಗಿದ್ದಾಗ, ನಿಗಮವನ್ನು ನಷ್ಟದಿಂದ ಪಾರು ಮಾಡಿ ಅತ್ಯಧಿಕ ಲಾಭ ಗಳಿಸುವಂತೆ ಮಾಡಿದ್ದರು. ಅಂತಹ ಅನುಭವಿ ನಾಯಕರಿಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಕೂಡಲೇ ಮಧ್ಯಪ್ರವೇಶಿಸಿ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವಿನಂತಿಸಿದರು.
ಒಂದು ವೇಳೆ ತಮ್ಮ ನ್ಯಾಯಯುತ ಬೇಡಿಕೆಯನ್ನು ಪಕ್ಷದ ಹೈಕಮಾಂಡ್ ನಿರ್ಲಕ್ಷಿಸಿದಲ್ಲಿ, ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರೇಶ ಭಜಂತ್ರಿ, ಪಂಚ ಗ್ಯಾರಂಟಿ ಸಮಿತಿ ಸದಸ್ಯ ಸಂಗಮೇಶ ಚಲವಾದಿ, ಮುಖಂಡರಾದ ಮುತ್ತಣ್ಣ ಒಡ್ಡೊವಡಗಿ, ಶರಣಪ್ಪ ಚಲವಾದಿ, ಬಸವರಾಜ ಗೋನಾಳ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.