ಅಕ್ಟೋಬರ್ 26 ಹಾಗೂ 27ರಂದು ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ವಿಜಯಪುರ, ಅಕ್ಟೋಬರ್ 24 : ಜಿಲ್ಲೆಯಲ್ಲಿ ಅಕ್ಟೋಬರ್ 26 ಹಾಗೂ 27 ರಂದು ನಡೆಯುವ ಗ್ರಾಮ ಆಡಳಿತ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಗುರುವಾರ ನಗರದ ಪಿಡಿಜೆ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅ.26 ರಂದು ಜಿಲ್ಲೆಯ 09 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅ.27ರಂದು 80 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗೆ ನಿಯೋಜಿತ ಮಾರ್ಗಾಧಿಕಾರಿಗಳು, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಓಎಂಆರ್ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಂಡು ನಿಗದಿತ ಸಮಯದಲ್ಲಿ ಹಸ್ತಾಂತರ ಮಾಡಬೇಕು. ಪರೀಕ್ಷೆ ಮುಗಿದ ನಂತರ ಜಿಲ್ಲಾ ಖಜಾನೆಗೆ ಮರಳಿ ತಲುಪಿಸುವುದು ಸೇರಿದಂತೆ ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.
ಅ.26 ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ 9 ವೀಕ್ಷಕರನ್ನು ನೇಮಿಸಲಾಗಿದೆ. ಈ ಪರೀಕ್ಷೆಗೆ 4608 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ ಹಾಗೂ ಅ.27ರಂದು ನಡೆಯುವ ಪತ್ರಿಕೆ-01 ಹಾಗೂ ಪತ್ರಿಕೆ-02ಕ್ಕೆ 32744 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವರಂತೆ ಒಟ್ಟು 80 ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧೀಕ್ಷಕರು, ಓರ್ವ ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ಓರ್ವ ವಿಶೇಷ ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಕ ಮಾಡಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಇಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್‍ಗಳು, ಇಯರ್ ಫೋನ್‍ಗಳು, ಮೈಕ್ರೋ ಫೋನ್‍ಗಳು, ಬ್ಲೂಟೂತ್ ಸಾಧನ, ಕೈ ಗಡಿಯಾರ ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೇಂದ್ರಗಳ ಉಪ ಮುಖ್ಯ ಅಧೀಕ್ಷಕರುಗಳು ತಮ್ಮ ಕೇಂದ್ರಕ್ಕೆ ನಿಗದಿಗೊಳಿಸಿದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಆಸನದ ವ್ಯವಸ್ಥೆ, ಪರೀಕ್ಷಾ ಕೊಠಡಿಯಲ್ಲಿ ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ ಇರುವಂತೆ ನೊಡಿಕೊಳ್ಳಬೇಕು ಎಂದು ಅವರು ಹೇಳಿದರು.
ಪರೀಕ್ಷೆಗೆ ನಿಯೋಜಿತ ವೀಕ್ಷಕರು ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರರಿಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷೆ ನಡೆದ ಬಗ್ಗೆ ನಿಗದಿತ ನಮೂನೆಯಲ್ಲಿ ವರದಿಯನ್ನು ಪರೀಕ್ಷಾ ಕೇಂದ್ರದ ಲಾಗಿನ್ ಮೂಲಕ ಅಪಲೋಡ್ ಮಾಡಿ ಅದರ ಪ್ರತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರಿಗೆ ಕಳುಹಿಸುವುದು ಸೇರಿದಂತೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿ ಅಬೀದ ಗದ್ಯಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.