ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ನಡೆಯುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ : ಸಚಿವ ಎಮ್ ಬಿ ಪಾಟೀಲ
ವಿಜಯಪುರ 13 : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರ ಸೆಪ್ಟೆಂಬರ್ 15 ರವಿವಾರದಂದು ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮ ಆಯೋಜಿಸಿದೆ. ಇದರ ಭಾಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ನಿಡಗುಂದಿ ತಾಲೂಕಿನ ಆಲಮಟ್ಟಿಯವರೆಗೆ ಒಟ್ಟು 62 ಕಿ. ಮೀ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕೋರಿದ್ದಾರೆ.
ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಡಾ. ಬಿ. ಆರ್. ಅಂಬೇಡ್ಕರ ಅವರ ಸಂವಿಧಾನದ ಆಶಯಗಳ ಕುರಿತು ಜನಜಾಗೃತಿ ಮೂಡಿಸು ದಿಕ್ಕಿನಲ್ಲಿ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದನ್ನು ಕಡ್ಡಾಯಗೊಳಿಸಿದೆ. ಸಂವಿಧಾನ ಜಾಗೃತಿ ಜಾಥಾದ ಮೂಲಕ ರಾಜ್ಯದ ಮೂಲೆ ಮೂಲೆ ತಲುಪುವ ಕೆಲಸ ಮಾಡಿದೆ. ರಾಜ್ಯ ಸರಕಾರದ ಈ ಕೆಲಸಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಜನರಲ್ಲಿ ಬಿತ್ತರಿಸುವ ಸಲುವಾಗಿ ಸೆಪ್ಟೆಂಬರ್ 15 ರಂದು ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಬೃಹತ್ ಮಾನವ ಸರಪಳಿ ರಚನೆ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ನಿಡಗುಂದಿ ತಾಲೂಕಿನ ಆಲಮಟ್ಟಿಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭಾತೃತ್ವದ ಆದರ್ಶಗಳನ್ನು ಜನರಲ್ಲಿ ಗಟ್ಟಿಗೊಳಿಸಲು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ನಾನಾ ಸಂಘ-ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು, ಎಲ್ಲ ಸರಕಾರ ಮತ್ತು ಸರಕಾರೇತರ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ಎಲ್ಲ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಕೋರಿದ್ದಾರೆ.