ಲೋಕಸಭಾ ಚುನಾವಣೆ; 4 ನೇ ಹಂತದ ಮತದಾನ ಇಂದು ಬೆಳಗ್ಗೆ 7 ರಿಂದ ಸಂಜೆ 6ರ ತನಕ, 96 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ..
Voice of Janata :LOKASABHA ELECTION 2024 :ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ ನಡೆಯಲಿದ್ದು, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಆಂಧ್ರಪ್ರದೇಶ (25) ಮತ್ತು ತೆಲಂಗಾಣದ (17) ಎಲ್ಲ ಕ್ಷೇತ್ರಗಳಲ್ಲದೆ ಉತ್ತರ ಪ್ರದೇಶದ 13, ಮಹಾರಾಷ್ಟ್ರದ 11, ಮಧ್ಯಪ್ರದೇಶ, ಪಶ್ಚಿಮ ಬಂಗಾಳದ ತಲಾ ಎಂಟು, ಬಿಹಾರದ ಐದು, ಜಮ್ಮು ಮತ್ತು ಕಾಶ್ಮೀರದ ಒಂದು, ಒಡಿಶಾ ಮತ್ತು ಜಾರ್ಖಂಡ್‌ನ ತಲಾ ನಾಲ್ಕು ಕ್ಷೇತ್ರಗಳಲ್ಲಿ ಮತದಾನಕ್ಕೆ ವೇದಿಕೆ ಸಜ್ಜಾಗಿದೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ.
ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿರುವ 96 ಕ್ಷೇತ್ರಗಳಲ್ಲಿ ಬಿಜೆಪಿಯು ಕಳೆದ ಬಾರಿ 40ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಿಸಿದ್ದರೆ, ಕಾಂಗ್ರೆಸ್ ಆರು ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳು ಕಣದಲ್ಲಿದ್ದು, 17.48 ಲಕ್ಷ ಅರ್ಹ ಮತದಾರರಿದ್ದಾರೆ. 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದು.
ನಾಲ್ಕನೇ ಹಂತ ಮುಕ್ತಾಯಗೊಂಡರೆ, 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆಗೆ ತೆರೆ ಬಿದ್ದಂತಾಗಲಿದೆ. 543 ಲೋಕಸಭಾ ಕ್ಷೇತ್ರಗಳಲ್ಲಿ 381ರಲ್ಲಿ ಮತದಾನ ಪೂರ್ಣಗೊಳ್ಳಲಿದೆ.
ಮುಂದಿನ ಮೂರು ಹಂತಗಳ ಮತದಾನ ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಮತ ಎಣಿಕೆಗೆ ಜೂನ್ 4ರ ಮುಹೂರ್ತ ನಿಗದಿಯಾಗಿದೆ.