ಉಪವಾಸ ಸತ್ಯಾಗ್ರಹ ಕೈ ಬಿಡಲು ಮನವಿ..!
ಕಲಬುರಗಿ: ಮಾ – 23: ಅಫಜಲಪುರ :
ಅಮರಣಾಂತ ಉಪವಾಸ ಸತ್ಯಾಗ್ರಹ ಕೈ ಬಿಡಲು ಶಿವಕುಮಾರ್ ನಾಟೀಕಾರ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿವಕುಮಾರ್ ನಾಟಿಕಾರ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗಾಗಿ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಶಿವಕುಮಾರ್ ಅವರ ಆರೋಗ್ಯ ವಿಚಾರಿಸುವ ಉದ್ದೇಶದಿಂದ ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿದ್ದು, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ಮುಂಬರುವ ದಿನಗಳಲ್ಲಿ ಈ ಜಲಾಶಯಗಳನ್ನು ಅವಲಂಬಿಸಿರುವ ಜಿಲ್ಲೆಗಳ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅವಶ್ಯಕತೆಗಳಿಗೆ ಅನುಗುಣವಾಗಿ ಅಗತ್ಯ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸಿ ಅಫಜಲಪುರ ತಾಲೂಕಿನ ಜನ ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರು ಒದಗಿಸಲು ಬೇಕಾಗುವ ಎಲ್ಲ ಕ್ರಮ ಕೈಗೊಳ್ಳಲಿದೆ. ಹಾಗಾಗಿ, ಆರೋಗ್ಯದ ದೃಷ್ಟಿಯಿಂದ ಈ ಕೂಡಲೇ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.