ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 1,187 ಸ್ಥಾನಗಳ ಪೈಕಿ 500 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಹುಚ್ಚಪ್ಪ ತಳವಾರ ಹರಿ ಹಾಯ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ. ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ ಬಿಜೆಪಿಯ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಎಚ್ಚರಿಕೆಯ ಸಂದೇಶವಾಗಿದೆ. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳು ಹಾಗೂ ಜಯಗಳಿಸಿರುವ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.