ಅಫಜಲಪುರ: ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶದ ಜನರು ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ದೂರದ ಪ್ರದೇಶಗಳಿಗೆ ಕೂಲಿಗಾಗಿ ಗುಳೆ ಹೋಗುವುದನ್ನು ತಪ್ಪಿಸಿದೆ. ಉದ್ಯೋಗ ಖಾತ್ರಿ ಯೋಜನೆ ಗ್ರಾಮಗಳ ಅಭಿವೃದ್ದಿಗೆ ಪೂರಕವಾಗಿದೆ ಎಂದು ತಾಲೂಕು ಐಇಸಿ ಸಂಯೋಜಕಿ ಶೋಭಾ ಕಣಮಸ್ಕರ ಹೇಳಿದರು. ತಾಲೂಕಿನ ಮಲ್ಲಾಬಾದ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಖಾತ್ರಿ ಯೋಜನೆ ರೋಜಗಾರ ದಿನಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮಗಳಿಗೆ ವರದಾನವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಣ್ಣು ಮತ್ತು ಗಂಡು ಸಮಾನ ಕೂಲಿ ಪಡೆಯಬಹುದು. ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾಹಿತಿ ಇಲ್ಲದವರು ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ಎಲ್ಲರೂ ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಚಿದಾನಂದ ಬಸರಿಗಿಡ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಗ್ರಾಮೀಣ ಜನರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿಗೆ ತಂದಿದ್ದು, ಇಲಾಖೆ ಅಧಿಕಾರಿಗಳ ಮೂಲಕ ಮಾಹಿತಿ ತಿಳಿದುಕೊಂಡು ರೈತರು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಗ್ರಾಮಗಳಿಗೆ ವರದಾನವಾಗಿವೆ. ಕುಟುಂಬಕ್ಕೆ ಉದ್ಯೋಗ ನೀಡುವುದು. ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಒದಗಿಸುವ ಹಾಗೂ ನೈಸರ್ಗಿಕ ಸಂಪನ್ಮೂಲ ಬಲಪಡಿಸುವ ಹಿತ ದೃಷ್ಟಿಯಿಂದ ಮತ್ತು ವಲಸೆ ಹೋಗುವುದನ್ನು ತಡೆಗಟ್ಟಿ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಐಇಸಿ ಸಂಯೋಜಕಿ ಶೋಭಾ ಕಣಮಸ್ಕರ, ಡಿಇಒ ರಾಜಶೇಖರ ಪೂಜಾರಿ ಸೇರಿದಂತೆ ಕೂಲಿ ಕಾರ್ಮಿಕರು ಗ್ರಾಮಸ್ಥರಿದ್ದರು.