ಎಸ್ ಸಿಪಿ/ಟಿಎಸ್‌ಪಿ ಮಾಸಿಕ ಸಭೆ
ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚನೆ
ವಿಜಯಪುರ.ಡಿ.16 :ಎಸ್ ಸಿಪಿ-ಟಿಎಸ್‌ಪಿಯಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಟಾನಗೊಳಿಸಿ,ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಪ್ರಗತಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-2026ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಯ ಇಲಾಖಾವಾರು ಡಿಸೆಂಬರ್-2025ರ ಮಾಹೆಯದ ಅಂತ್ಯಕ್ಕೆ ಸಾಧಿಸಿದ ಪ್ರಗತಿ ವರದಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಎಸ್ ಸಿಪಿ-ಟಿಎಸ್‌ಪಿ ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಯೋಜನೆಯ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.
ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಎಸ್ ಸಿಪಿ-ಟಿಎಸ್‌ಪಿ ಸಭೆಗೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಪ್ರತಿನಿಧಿಗಳನ್ನು ನಿಯೋಜಿಸದೇ ಖುದ್ದಾಗಿ ಹಾಜರಾಗುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.ಈ ಯೋಜನೆಗೆ ನಿಗದಿಪಡಿಸಿದ ಅನುದಾನ ಲ್ಯಾಪ್ಸ್ ಆಗದಂತೆ ಕ್ರಿಯಾ ಯೋಜನೆ ರೂಪಿಸಿಕೊಂಡು ನಿಗದಿತ ಕಾಲಾವಧಿಯೊಳಗೆ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಬೇಕು ಎಂದು ಅವರು ಸೂಚಿಸಿದರು.
ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದ ಯೋಜನೆಗಳಡಿ ನಿಗದಿತ ಯೋಜನೆಗಳ ಪ್ರಗತಿ ಸಾಧಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು, ಅತ್ಯಂತ ಜವಾಬ್ದಾರಿಯಿಂದ ಯೋಜನೆ ಅನುಷ್ಠಾನಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ವಿಳಂಬವಾಗದೇ ತಲುಪಿಸಬೇಕು.ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಬಾಕಿ ಉಳಿಸಿಕೊಳ್ಳದೇ ನಿಗದಿ ಗುರಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ತೋಟಗಾರಿಕೆ,ಮೀನುಗಾರಿಕಾ, ಪಶುಸಂಗೋಪನಾ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ ಹಾಗೂ ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಡಿಸೆಂಬರ್-2025ರ ಅಂತ್ಯದವರೆಗೆ ಸಾಧಿಸಿದ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ರಾಹುಲ ಭಾವಿದೊಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಹೇಶ ಪೋತದಾರ, ಸಾರ್ವಜನಿಕ ಮತ್ತು ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಶ್ರೀಮತಿ ಉಮಾಶ್ರೀ ಕೊಳ್ಳಿ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


















