ಕಾಮಗಾರಿ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಅನ್ಯಾಯ: ಶಿವಕುಮಾರ ನಾಟೀಕಾರ ಆರೋಪ
ಅಫಜಲಪುರ: ತಾಲೂಕಿನಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ಇದ್ದರೂ ಶಾಸಕ ಎಂ.ವೈ. ಪಾಟೀಲ್ ಹಾಗೂ ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಕುತಂತ್ರದಿಂದ ಅನ್ಯಾಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಆರೋಪಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್‌ಐಡಿಎಲ್ ಮೂಲಕ ಕಾಮಗಾರಿಗಳನ್ನು ಪ್ಯಾಕೇಜ್ ರೂಪದಲ್ಲಿ ನೀಡಿ ಟೆಂಡರ್ ಪ್ರಕ್ರಿಯೆ ತಪ್ಪಿಸಲಾಗುತ್ತಿದೆ. ಇದರಿಂದ ಎಸ್‌ಸಿ, ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಸಿಗಬೇಕಾದ ಅವಕಾಶಗಳು ಕಸಿದುಕೊಳ್ಳಲಾಗುತ್ತಿದೆ ಎಂದು ದೂರಿದರು.
ಜೆಡಿಎಸ್ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಸಿಂಗೆ ಮಾತನಾಡಿ, ಎಸ್‌ಸಿ, ಎಸ್‌ಟಿ ಅನುದಾನವನ್ನು ಸಮುದಾಯದ ಜನರಿಗೆ ಬಳಸದೇ ಬೇರೆಡೆ ದುರ್ಬಳಕೆ ಮಾಡಲಾಗುತ್ತಿದೆ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿದರೆ ಸತ್ಯ ಬಹಿರಂಗವಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮರೇಪ್ಪ ಜಮಾದಾರ, ಸಿದ್ದು ನ್ಯಾವನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.