ಟಿಇಟಿ -2024 ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ
ವಿಜಯಪುರ, ಜೂನ್,27 : ಇದೇ ಜೂನ್ 30 ರಂದು ಶಿಕ್ಷಕರ ಅರ್ಹತಾ ( ಟಿಇಟಿ) ಪರೀಕ್ಷೆಗಳು ವಿಜಯಪುರ ನಗರದ 43 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ 43 ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಅಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನನ್ನು ತರುವುದನ್ನು, ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಇಂಟರ್ನೆಟ್ ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ಅವರು ಆದೇಶಿಸಿದ್ದಾರೆ.